ಹೈದರಾಬಾದ್: ತಡೆಗೋಡೆಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಹಿನ್ನಲೆ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ ದಾರುಣ ಸಾವನ್ನಪಿದ್ದರೆ. ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್‌ನ ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಸಂಭವಿಸಿದೆ.

ನಂದಿತಾ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ ನಗರಕ್ಕೆ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎಕ್ಸ್‌ಪ್ರೆಸ್‌ವೇಯ ಎಡಭಾಗದಲ್ಲಿರುವ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಶಾಸಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಕಾರು ಚಾಲಕನನ್ನು ಸಮೀಪದ ಪಟಂಚೇರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.



