ಪ್ರೊಬೇಷನರಿ ಐಪಿಎಸ್ ಅಧಿಕಾರಿಯ ಶ್ರಮ ಫಲಿಸುವ ಹೊತ್ತಲ್ಲಿ ಬಂದ ಜವರಾಯ

ಹಾಸನ : ಹಾಸನ-ಮೈಸೂರು ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಕಿತ್ತಾನಿ ಗಡಿ ಬಳಿ ನಡೆದಿದೆ.
ಐಪಿಎಸ್ ಅಧಿಕಾರಿಯನ್ನು ಹರ್ಷಬರ್ಧನ್ ಎಂದು ಗುರ್ತಿಸಲಾಗಿದ್ದು, ಮಧ್ಯ ಪ್ರದೇಶದ ಸಿಂಗ್ರುಲಿ ಜಿಲ್ಲೆಯ ದೋಸಾರ್ ಗ್ರಾಮದವರು ಎಂದು ತಿಳಿದು ಬಂದಿದೆ. ಇವರು ಪ್ರೊಬೇಷನರಿ ಎಎಸ್ಪಿಯಾಗಿ ಮೊದಲ ದಿನ ಕರ್ತವ್ಯಕ್ಕೆ ಹಾಜರಾಗಲು ಹಾಸನಕ್ಕೆ ತೆರಳುವ ವೇಳೆ ಘಟನೆ ನಡೆದಿದ್ದು, ಜನರಲ್ಲಿ ಬೇಸರ ಮೂಡಿಸಿದೆ. ದಾರಿ ಮಧ್ಯೆ ಕಿತ್ತಾಡಿ ಗಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ವಾಹನ ರಸ್ತೆ ಪಕ್ಕದ ಮನೆಗೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಎಎಸ್ಪಿ ಭಾನುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಾಲಕ ಕಾನ್ಸ್ಟೇಬಲ್ ಮಂಜೇಗೌಡರಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯ ಮಂತ್ರಿ ಸೇರಿ ಹಲವು ಗಣ್ಯರ ಸಂತಾಪ
ಈ ದುರ್ಘಟನೆಯ ಸುದ್ದಿ ತಿಳಿದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿ ‘ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು.’ ಎಂದು ಎಕ್ಸ್ ನಲ್ಲಿ ಪೋಸ್ಟ್ ಹಂಚಿದ್ದಾರೆ.



