ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಖಜಾನೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ ಮಹಿಳೆಯೊಬ್ಬರ ಬಳಿ ಮುಖ್ಯ ಲೆಕ್ಕಿಗ ಹಾಗೂ ಎಫ್.ಡಿ.ಎ ಲಂಚದ ಬೇಡಿಕೆ ಇಟ್ಟಿದ್ದಾರೆ.

ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ರು. 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿದ್ದು, ಜೂನ್ 2024 ರಂದು ಮರಣ ಹೊಂದಿದ್ದಾರೆ. ಬಳಿಕ ಮಹಿಳೆ ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಬಳಿ ಗಂಡನ ಮರಣ ಉಪದಾನ ನೀಡುವಂತೆ ಕೇಳಿದ್ರು. ಈ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಮಾತ್ರ ಆಗಿರ್ಲಿಲ್ಲ.

ಹಣ ಜಮೆ ಮಾಡಲು ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಎಫ್.ಡಿ.ಎ ಬಸವೆ ಗೌಡ ಐದು ಸಾವಿರ ಲಂಚದ ಬೇಡಿಕೆಯನ್ನಿಟ್ಟಿದ್ದಾರೆ. ಈ ಬಗ್ಗೆ ಮಹಿಳೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಲೋಕಾಯುಕ್ತ ಎಸ್ಪಿ ಕುಮಾರಚಂದ್ರ, ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ವೇಳೆ ರೆಡ್ ಹ್ಯಾಂಡ್ ಆಗಿ ಲಂಚಕೋರರು ಸಿಕ್ಕಿಬಿದ್ದಿದ್ದಾರೆ. ಪ್ರಕರಣ ದಾಖಲಾಗಿದೆ.



