ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಮತ್ತೊಮ್ಮೆ ನಮ್ಮ ಕರಾವಳಿ ಭಾಗದ ಹಿಂದೂ ನಾಯಕರು ಮತ್ತು ಸಂಘಟನೆಗಳನ್ನು ಬೆದರಿಸಲು, ವಿಭಜಿಸಲು ಹಾಗೂ ಕಿರುಕುಳ ನೀಡಲು ಆಡಳಿತ ಯಂತ್ರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಕಳವಳ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿ ಕೇಸ್ ದಾಖಲಿಸುವುದನ್ನು ಖಂಡಿಸಿರುವ ಕ್ಯಾ.ಚೌಟ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ, ತನ್ನ ಹುಳುಕನ್ನು ಮರೆಮಾಚಲು, ಹತಾಶೆಯಿಂದ ಹಿಂದೂಗಳ ಧ್ವನಿ ಹತ್ತಿಕ್ಕುತ್ತಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ದ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಬಿಜೆಪಿ ಮುಖಂಡ ಹಾಗೂ ಹಿಂದೂ ನಾಯಕ ಅರುಣ್ ಪುತ್ತಿಲ ಅವರನ್ನು ಕಲಬುರ್ಗಿಗೆ ಗಡಿಪಾರು ಮಾಡಲು ನಿರ್ಧರಿಸಿದೆ. ಹಿಂದೂ ಸಮುದಾಯದ ಯುವಕರು ಹಾಗೂ ಪ್ರಮುಖ ನಾಯಕರನ್ನು ಸುಳ್ಳು ಕೇಸ್ ದಾಖಲಿಸಿ, ಗಡಿಪಾರು ಮಾಡಲು ಹೊರಟಿರುವುದನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರದ ಈ ಸಂವಿಧಾನ ವಿರೋಧಿ, ಅಧಿಕಾರಶಾಹಿ ಹಾಗೂ ಹಿಂದೂ ವಿರೋಧಿ ಕ್ರಮಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.



