ಕಾರ್ಕಳ: ಬೈಲೂರು ಸಮೀಪದ ಜಾರ್ಕಳ ಬಸ್ರಿಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆ ಜನವರಿ 24 ರಂದು ನಡೆದಿದೆ.
ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸನ್ನು ಓವರ್ಟೇಕ್ ಮಾಡುವ ಭರದಲ್ಲಿ ಬಸ್ರಿ ಶಾಲಾ ತಿರುವಿನಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬಸ್ಸು ಚಾಲಕ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.



