ನ್ಯೂಪಡ್ಪು ಸರಕಾರಿ ಪ್ರಾಥಮಿಕ ಶಾಲೆಗೆ ಹೊಸದಾಗಿ ನಿರ್ಮಿಸಲಾದ ನೂತನ ಕಟ್ಟಡವನ್ನು ಸ್ಪೀಕರ್ ಯು.ಟಿ.ಖಾದರ್ ಫರೀದ್ ಉದ್ಘಾಟಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಪ್ರಾಥಮಿಕ ಶಾಲೆಯಲ್ಲಿ ಬೇರೆ ಬೇರೆ ಕಾರಣದಿಂದ ವಿದ್ಯಾರ್ಥಿಗಳ ಕೊರತೆಯಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾಗ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಆಡಳಿತ, ಶಾಲಾಭಿವೃದ್ಧಿ ಸಮಿತಿ, ದಾನಿಗಳು ಹಾಗೂ ಶಿಕ್ಷಕ ವರ್ಗದ ಸಹಕಾರದಿಂದ ದುಡಿದ ಕಾರಣ ಎಲ್‌ಕೆ ಜಿ, ಯು ಕೆ ಜಿ ಜೊತೆಗೆ ಒಂದು ಹಾಗೂ ಎರಡನೆಯ ತರಗತಿಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ವ್ಯವಸ್ಥೆ ಮಾಡಲಾಯಿತು. ಅದರಿಂದಾಗಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಾ ಹೋಯಿತು ಎಂದು ಅವರು ಸಂತಸ ವ್ಯಕ್ತಪಡಿಸಿದ್ರು. ಕಾರ್ಯಕ್ರಮದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಮಾತನಾಡಿ ,ಹರೇಕಳ ನ್ಯೂಪಡ್ಪುವಿನಲ್ಲಿ ಪದವಿಪೂರ್ವ ಕಾಲೇಜು ಆರಂಭವಾಗಿದ್ದು, ನೂತನ ಸುಸಜ್ಜಿತ ಕಟ್ಟಡಕ್ಕೆ ಏಳು ಕೋಟಿ ರೂ. ಒದಗಿಸಬೇಕಾಗಿ ಶಾಸಕರಲ್ಲಿ ವಿನಂತಿಸಿದ್ದಾರೆ.



