ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ವಾಮಂಜೂರು ಬಳಿಯ ಕೆತ್ತಿಕಲ್‌ನಲ್ಲಿ ನಡೆದಿದೆ.

ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಕೆತ್ತಿಕಲ್ ಬಳಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಆಟೋರಿಕ್ಷಾದ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿದೆ.

ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



