ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪಲ್ಲಮಜಲು ಪ್ರದೇಶದಲ್ಲಿರುವ ಕಲ್ಲಿನ ಕೋರೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೋರಾಟಗಾರರು ಸಲ್ಲಿಸಿದ್ದ ಹೊಸ ದೂರಿನ ಆಧಾರದ ಮೇಲೆ ಈ ಪರಿಶೀಲನೆ ನಡೆದಿದ್ದು, ಸ್ಥಳದಲ್ಲಿ ಗ್ರಾಮಸ್ಥರು ಮತ್ತು ಹೋರಾಟಗಾರರಿಂದ ಅಧಿಕಾರಿಗಳಿಗೆ ಹಲವು ಅಹವಾಲುಗಳನ್ನು ಸಲ್ಲಿಸಲಾಯಿತು. ಕಲ್ಲು ಸಿಡಿಸಲು ಅಗತ್ಯ ಅನುಮತಿ ಇಲ್ಲದಿದ್ದರೂ ಕಳೆದ ಸುಮಾರು 17 ವರ್ಷಗಳಿಂದ ಸ್ಫೋಟಕಗಳನ್ನು ಬಳಸಿ ಕಲ್ಲು ಒಡೆದು ಸಾಗಾಟ ನಡೆಸಲಾಗುತ್ತಿದೆ ಎಂಬ ಆರೋಪವನ್ನು ಹೋರಾಟಗಾರರು ಪುನರುಚ್ಚರಿಸಿದ್ದಾರೆ. ಈ ಕುರಿತು ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ನಡೆಸಲಾಗುತ್ತಿದ್ದು, ಪ್ರಕರಣದ ತನಿಖೆ ಜಿಲ್ಲಾಧಿಕಾರಿಗಳ ಹಂತದಲ್ಲಿದೆ ಎಂದು ತಿಳಿದುಬಂದಿದೆ.

ಇದೀಗ ಮತ್ತೊಮ್ಮೆ ಗಣಿ ಇಲಾಖೆಗೆ ಸಲ್ಲಿಸಲಾದ ದೂರಿನ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿ ದಿಲೀಪ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಅಧಿಕಾರಿಗಳಾದ ಪವನ್ ಹಾಗೂ ಮಾದೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಸ್ಥಳದಲ್ಲಿದ್ದ ಹೋರಾಟಗಾರರು ಹಾಗೂ ಗ್ರಾಮಸ್ಥರು ಕಲ್ಲುಕೋರೆಯಿಂದ ಉಂಟಾಗುತ್ತಿರುವ ಪರಿಸರ ಮತ್ತು ಸಾರ್ವಜನಿಕ ಸುರಕ್ಷತೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು. ಈ ಸಂದರ್ಭ ಕೋರೆಯ ಸಮೀಪದ ಮನೆಯೊಂದರ ಮಾಲಕರು, ಗಣಿಗಾರಿಕೆಯಿಂದ ಗುಡ್ಡ ಕುಸಿದು ತಮ್ಮ ಮನೆಗೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳಿಗೆ ತಿಳಿಸಿದರು. ಈ ಸಂಬAಧ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪ್ರತ್ಯೇಕ ದೂರು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆಯ ವಿವರಗಳನ್ನು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಿದ್ದು, ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.



