ಬಂಟ್ವಾಳ ತಾಲೂಕಿನ ಪೆರಮೊಗರು-ಪಂಜೊಳ್ಳೆ ರಸ್ತೆಯಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಹಲವು ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದ ಘಟನೆ ನಡೆದಿದೆ.

ವಿದ್ಯುತ್ ಕಂಬಗಳು ಉರುಳಿದ ಪರಿಣಾಮ ವಿದ್ಯುತ್ ತಂತಿಗಳು ರಸ್ತೆಯ ಮೇಲೆಯೇ ಬಿದ್ದಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇದೇ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದರ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ರಸ್ತೆ ಮೇಲಿದ್ದ ವಿದ್ಯುತ್ ತಂತಿಗಳು ಮತ್ತು ಕಂಬಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದ್ದು, ವಿದ್ಯುತ್ ಸಂಪರ್ಕ ಪುನಃಸ್ಥಾಪನೆಗೆ ಮೆಸ್ಕಾಂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರೀ ಗಾಳಿ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.



