ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಈ ಸೌಲಭ್ಯಕ್ಕೆ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಮುಂದಾಳತ್ವದಲ್ಲಿ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಸಮೀಪದಿಂದ ಬೆಳಿಗ್ಗೆ ಬಸ್‌ಗಳು ಹೊರಟಿದ್ದು, ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೂರಾರು ಅಭ್ಯರ್ಥಿಗಳು ಉತ್ಸಾಹದಿಂದ ಪ್ರಯಾಣ ಬೆಳೆಸಿದರು.
ಉಚಿತ ಸಾರಿಗೆ ವ್ಯವಸ್ಥೆಯಿಂದ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ ತಲುಪುವುದು ಸುಲಭವಾಗಿದ್ದು, ದೂರದ ಊರುಗಳಿಂದ ಬಂದ ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡರು. ಈ ವ್ಯವಸ್ಥೆಯಿಂದ ಪ್ರಯಾಣ ವೆಚ್ಚದ ಹೊರೆ ಕಡಿಮೆಯಾಗಿದ್ದು, ಹೆಚ್ಚಿನ ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಲು ಸಾಧ್ಯವಾಯಿತು.

ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖ ಕಂಪನಿಗಳು ಭಾಗವಹಿಸಿದ್ದು, ಸಾವಿರಾರು ಉದ್ಯೋಗಾವಕಾಶಗಳನ್ನು ಒದಗಿಸಲಾಗುತ್ತಿದೆ. ಜಿಲ್ಲೆಯ ವಿವಿಧ ಭಾಗಗಳಷ್ಟೇ ಅಲ್ಲದೆ ರಾಜ್ಯದ ಹಲವು ಜಿಲ್ಲೆಗಳಿಂದಲೂ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದಾರೆ.



