ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.

ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್, ಕುಂಟುಕುಡೇಲು ಇಳಿಜಾರು ರಸ್ತೆಯಲ್ಲಿ ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು ನೇರವಾಗಿ ಕೆಳಭಾಗಕ್ಕೆ ಚಲಿಸಿದೆ ಎನ್ನಲಾಗಿದೆ.
ಬಳಿಕ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯಲ್ಲಿ ಶಾಲಾ ಬಸ್ ಹಾನಿಗೊಂಡಿದ್ದು, ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದೆ.
ಸ್ಥಳೀಯರ ಸಮಯಪ್ರಜ್ಞೆಯಿಂದ ಹಾಗೂ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.



