ಪತ್ನಿಯ ಮೃತದೇಹ ಜಮೀನಿನ ಕೆರೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಪತಿಯೂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ.

ಶಿಶಿಲ ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ (ಹೆಸರು) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು-ಮೂರು ದಿನಗಳಿಂದ ಅವರು ನಾಪತ್ತೆಯಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ತನಿಯಪ್ಪ ಗೌಡ ಅವರು ತಮ್ಮ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇತ್ತೀಚೆಗಷ್ಟೇ ತನಿಯಪ್ಪ ಗೌಡ ಅವರ ಪತ್ನಿ ಚಿನ್ನಮ್ಮ ಅವರ ಮೃತದೇಹ ಪಕ್ಕದ ಜಮೀನಿನ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪತ್ನಿಯ ಸಾವು ಸಹಜವಲ್ಲ, ಇದರ ಹಿಂದೆ ಅನುಮಾನವಿದೆ ಎಂದು ಚಿನ್ನಮ್ಮ ಅವರ ಸಹೋದರ ಗಂಗಾಧರ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪತ್ನಿಯ ಸಾವಿನ ಬೆನ್ನಲ್ಲೇ ಪತಿಯ ಮೃತದೇಹವೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಪತಿಯ ಸಾವಿನ ಹಿಂದಿರುವ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



