ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬಜ್ಪೆ ಪೊಲೀಸ್ ಠಾಣೆಯ ನಿರೀಕ್ಷಕ ಬಾಲಕೃಷ್ಣ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಸಂತ್ರಸ್ತರಿಗೆ ವಾಪಸ್ ನೀಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಸಂತ್ರಸ್ತರಿಂದ ಈಗಾಗಲೇ ₹15 ಸಾವಿರ ಮುಂಗಡವಾಗಿ ಪಡೆದಿದ್ದರು ಎಂದು ಆರೋಪಿಸಲಾಗಿದೆ.
ಉಳಿದ ₹5 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಾಲಕೃಷ್ಣ ಅವರನ್ನು ಲಂಚದ ಹಣದ ಸಮೇತ ಬಂಧಿಸಿದ್ದರು. ಬಳಿಕ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನ್ಯಾಯಾಲಯದಲ್ಲಿ ಅನಾರೋಗ್ಯದ ಕಾರಣ ನೀಡಿ ಆಸ್ಪತ್ರೆಗೆ ದಾಖಲಿಸುವಂತೆ ಬಾಲಕೃಷ್ಣ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈ ನಡುವೆ ಬಂಧಿತ ಇನ್ಸ್ಪೆಕ್ಟರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



