ಬಸ್ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿಯಲ್ಲಿ ನಡೆದಿದೆ.

ಮೃತರನ್ನು ಬಾಳ್ತಿಲ ನಿವಾಸಿ ಹರೀಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಅವರು, ಸಂಜೆ ಕೆಲಸ ಮುಗಿಸಿ ಕಲ್ಲಡ್ಕ ಕಡೆಯಿಂದ ಬಸ್ನಲ್ಲಿ ಮನೆಗೆ ತೆರಳುತ್ತಿದ್ದರು.

ದಾಸಕೋಡಿಯಲ್ಲಿ ಬಸ್ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಹರೀಶ್ ನಾಯ್ಕ್ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣ ಹಾಗೂ ಕಾರಿನ ಚಾಲಕನ ಕುರಿತು ಮಾಹಿತಿ ಕಲೆಹಾಕಲಾಗುತ್ತಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



