‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.

ಮಾಡೂರು ಜಂಕ್ಷನ್‌ನಿಂದ ನಡಾರು ಮಡ್ಯಾರುವರೆಗಿನ ಪ್ರಮುಖ ರಸ್ತೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಲಾಯಿತು. ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿದ್ದ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಅಭಿಯಾನದಲ್ಲಿ ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯಾ ಸತೀಶ್ ಶೆಟ್ಟಿ, ಪಟ್ಟಣ ಪಂಚಾಯತ್ ಸದಸ್ಯ ಹರೀಶ್ ರಾವ್ ಮಡ್ಯಾರು, ಮುಖ್ಯಾಧಿಕಾರಿ ಮಾಲಿನಿ ಹಾಗೂ ಪಂಚಾಯತ್ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.

ನಿಟ್ಟೆ ನರ್ಸಿಂಗ್ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಶ್ರಮದಾನ ನಡೆಸಿದರು. ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವ ಮೂಲಕ ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಕೈಜೋಡಿಸುವಂತೆ ಈ ಸಂದರ್ಭದಲ್ಲಿ ಕರೆ ನೀಡಲಾಯಿತು.



