ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7 ಅರ್ಜಿಗಳನ್ನು ಸಲ್ಲಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ರಮಾನಾಥ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ರಮಾನಾಥ ರೈ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಣಿಯಲ್ಲಿ ನೂರಾರು ಮಂದಿಯ ಮತದಾನದ ಹಕ್ಕನ್ನು ಕಸಿಯುವ ಉದ್ದೇಶದಿಂದ ಚುನಾವಣಾ ಆಯೋಗಕ್ಕೆ ಫಾರಂ ನಂ.7ರ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿದರು.

ಸುಳ್ಳು ಮಾಹಿತಿ ಹಾಗೂ ನಕಲಿ ದಾಖಲೆಗಳನ್ನು ಸಲ್ಲಿಸಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸಲಾಗಿದೆ. ಸಾಲೆತ್ತೂರು ಸೇರಿದಂತೆ ಹಲವು ಗ್ರಾಮಗಳಲ್ಲಿಯೂ ಇದೇ ರೀತಿಯ ಘಟನೆಗಳು ನಡೆದಿವೆ ಎಂದು ಅವರು ಆರೋಪಿಸಿದರು.

ನೈಜ ಹಾಗೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲು ವ್ಯವಸ್ಥಿತವಾಗಿ ಕುತಂತ್ರ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಳ್ಳು ಅರ್ಜಿ ಸಲ್ಲಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಮಾನಾಥ ರೈ ಒತ್ತಾಯಿಸಿದರು.



