ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತಕ್ಷಣ ದಿನಾಂಕ ನಿಗದಿಪಡಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪೊಲೀಸರನ್ನು ಒತ್ತಾಯಿಸಿದೆ. ನಿಗದಿತ ಅವಧಿಯೊಳಗೆ ಅನುಮತಿ ನೀಡದಿದ್ದರೆ ಪಕ್ಷವೇ ಪ್ರತಿಭಟನೆಯ ದಿನಾಂಕ ಘೋಷಿಸಲಿದೆ ಎಂದು ನಾಯಕರು ಎಚ್ಚರಿಸಿದ್ದಾರೆ.

ಸಿಜೆಪಿ ಸಹ ಸಂಚಾಲಕರಾದ ಆಶುತೋಷ್ ರಂಕಾ, ಸೌರವ್ ದಾಸ್ ಹಾಗೂ ಪಕ್ಷದ ಕಾನೂನು ವಿಭಾಗದ ಮುಖ್ಯಸ್ಥೆ ರತ್ನಾ ಸಿಂಗ್ ಸೇರಿದಂತೆ ಇತರ ನಾಯಕರು ಪ್ರತಿಭಟನೆಗೆ ಅನುಮತಿ ಕೋರುವುದಾಗಿ ತಿಳಿಸಿದ್ದಾರೆ. ಈ ಕುರಿತು ಭಾನುವಾರ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಆಶುತೋಷ್ ರಂಕಾ, 24 ಗಂಟೆಗಳೊಳಗೆ ಪ್ರತಿಭಟನೆಗೆ ದಿನಾಂಕ ನಿಗದಿಪಡಿಸಬೇಕು. ಇಲ್ಲದಿದ್ದರೆ ಮತ್ತೊಂದು ಪ್ರತಿಭಟನೆಗೆ ಕರೆ ನೀಡಲಾಗುವುದು ಎಂದು ಹೇಳಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಶನಿವಾರ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿತ್ತು.
ಆದರೆ, ಮುಂಬೈನಿಂದ ಬಂದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಪ್ರತಿಭಟನೆಗೆ ಅನುಮತಿ ನೀಡುವಂತೆ ಪಕ್ಷ ಪೊಲೀಸರ ಮೇಲೆ ಒತ್ತಡ ಹೇರುತ್ತಿದೆ.



