ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಮುಂಜಾನೆ ಸೈಕಲ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕೋಟ ಮಣೂರು ನಿವಾಸಿ, ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ. ಅವರು ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಅವರಿಗೂ ಗಂಭೀರ ಗಾಯಗಳಾಗಿವೆ.

ಅಪಘಾತದ ಬಳಿಕ ಸ್ಥಳಕ್ಕೆ ಧಾವಿಸಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳು ಕಾರು ಚಾಲಕನನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು. ಕೋಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



