ಚುಟುಕು ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ರಮೇಶ್ ನಾಯ್ಕ್ ಮೆಲ್ಕಾರ್ ಅವರನ್ನು ನೇಮಕ ಮಾಡಲಾಗಿದೆ.

ಚುಟುಕು ಸಾಹಿತ್ಯದ ಬೆಳವಣಿಗೆ, ಸಾಹಿತ್ಯಾಸಕ್ತರನ್ನು ಒಗ್ಗೂಡಿಸುವುದು ಹಾಗೂ ಯುವ ಮತ್ತು ಹಿರಿಯ ಸಾಹಿತಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಚುಟುಕು ಸಾಹಿತ್ಯ ಪರಿಷತ್ ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಘಟಕಗಳನ್ನು ಹೊಂದಿದ್ದು, ಹಲವು ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಚುಟುಕು ಸಾಹಿತ್ಯದ ಕುರಿತು ಅರಿವು ಮೂಡಿಸುವುದು ಹಾಗೂ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಪರಿಷತ್ನ ಪ್ರಮುಖ ಉದ್ದೇಶವಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಘಟಕಗಳ ಮೂಲಕ ನಿರಂತರ ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಿದೆ. ಈ ಹಿಂದೆ ಆನಂದ ರೈ ಅಡ್ಕಸ್ಥಳ ಅವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕು ಘಟಕವನ್ನು ವಿಸರ್ಜಿಸಿ ನೂತನ ಸಮಿತಿ ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು ಹಾಗೂ ಗೌರವಾಧ್ಯಕ್ಷ ಇರಾನೇಮು ಪೂಜಾರಿ ಅವರ ಶಿಫಾರಸಿನ ಮೇರೆಗೆ ರಾಜ್ಯ ಪ್ರಧಾನ ಸಂಚಾಲಕ ಡಾ. ಎಂ.ಜಿ.ಆರ್. ಅರಸ್ ಅವರು ರಮೇಶ್ ನಾಯ್ಕ್ ಮೆಲ್ಕಾರ್ ಅವರನ್ನು ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.



