ವಾಮಂಜೂರಿನ ತಿರುವೈಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ರಮ ಹಣಕಾಸು ವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಶಾಲೆಯ ಕಳೆದ 11 ವರ್ಷಗಳ ಸಂಪೂರ್ಣ ಲೆಕ್ಕಪತ್ರಗಳನ್ನು ಒಂದು ತಿಂಗಳೊಳಗೆ ಸಾರ್ವಜನಿಕರ ಮುಂದಿಡಬೇಕು ಎಂದು ಶಾಲೆಯ ಹಳೆ ವಿದ್ಯಾರ್ಥಿ ಉಮೇಶ್ ಕೋಟ್ಯಾನ್ ಆಗ್ರಹಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015ರಿಂದ ಈವರೆಗೆ ಶಾಲೆಯ ಹೆಸರಿನಲ್ಲಿ ಸುಮಾರು 3ರಿಂದ 4 ಕೋಟಿ ರೂ.ಗಳ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಶಾಲೆಯ ಹಣಕಾಸು ವ್ಯವಹಾರಗಳ ಕುರಿತು ಸಂಪೂರ್ಣ ಲೆಕ್ಕಪತ್ರಗಳನ್ನು ಬಹಿರಂಗಪಡಿಸಿ ಪಾರದರ್ಶಕತೆ ಕಾಪಾಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಯಂತಿ ದಾಮೋದರ್, ಬಾಲಕೃಷ್ಣ ಅಂಚನ್, ಶೈನಾಸ್, ಕುಮುದಾ ಹಾಗೂ ಅಮೃತಾ ಶೆಟ್ಟಿ ಉಪಸ್ಥಿತರಿದ್ದರು.



