ಕಡೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಶಾರದ ಮಂಟಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಕಮಲಾಕ್ಷ ಆಚಾರ್ಯ ಎಂದು ಗುರುತಿಸಲಾಗಿದೆ. ಅಕ್ಟೋಬರ್ 31ರಂದು ರಾತ್ರಿ ಸುಮಾರು 9 ಗಂಟೆಗೆ ಕಮಲಾಕ್ಷ ಆಚಾರ್ಯ ಅವರು ಮಡಂತ್ಯಾರಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದರು.
ಈ ವೇಳೆ ಅದೇ ರಸ್ತೆಯಲ್ಲಿ ಮುಂಭಾಗದಲ್ಲಿ ಸಾಗುತ್ತಿದ್ದ ಕಾರನ್ನು ಓವರ್ಟೇಕ್ ಮಾಡಲು ಯತ್ನಿಸಿದ ಮತ್ತೊಂದು ಬೈಕ್ ಸವಾರನ ನಿಯಂತ್ರಣ ತಪ್ಪಿ, ಎದುರಿನಿಂದ ಬರುತ್ತಿದ್ದ ಕಮಲಾಕ್ಷ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದ ಕಮಲಾಕ್ಷ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 1ರ ಬೆಳಗಿನ ಜಾವ 2.16ಕ್ಕೆ ಮೃತಪಟ್ಟಿದ್ದಾರೆ.
ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರ ನಾಗೇಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



