ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ದ್ವಂದ್ವ ನಿಲುವು ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಆರೋಪಿಸಿದ್ದಾರೆ.

ಮಂಗಳೂರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದಾಗ ಎಸ್‌ಐಆರ್ ಸರಿಯಾಗಿದೆ, ಸೋತಾಗ ಅಸಂವಿಧಾನಿಕವಾಗುತ್ತದೆ ಎಂಬುದು ಆ ಪಕ್ಷದ ರಾಜಕೀಯ ಬೂಟಾಟಿಕೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.
2014ರಿಂದ 2025ರವರೆಗೆ ಕಾಂಗ್ರೆಸ್ ಪಕ್ಷ 56 ವಿಧಾನಸಭಾ ಚುನಾವಣೆಗಳಲ್ಲಿ ಸೋಲು ಕಂಡಿದೆ. ತನ್ನ ಚುನಾವಣಾ ವೈಫಲ್ಯಗಳಿಗೆ ಎಸ್‌ಐಆರ್ ಕಾರಣ ಎಂದು ಆರೋಪಿಸುವ ಬದಲು ಪಕ್ಷದ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.
ಎಸ್‌ಐಆರ್ ನಡೆಸಲು ಚುನಾವಣಾ ಆಯೋಗಕ್ಕೆ ಸಂವಿಧಾನಬದ್ಧ ಅಧಿಕಾರವಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ನಿಲುವನ್ನು ಗೌರವಿಸುತ್ತಾರೆಯೇ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಗೌರವ್ ಭಾಟಿಯಾ ಸವಾಲು ಹಾಕಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.



