ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳವನ್ನು ಖಂಡಿಸಿ, ಬೆಲೆ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಒಂದು ಕೈಯಿಂದ ಹಣ ನೀಡಿ, ಮತ್ತೊಂದು ಕೈಯಿಂದ ಬೆಲೆ ಏರಿಕೆಯ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ತನ್ನ ಪಕ್ಷದ ಖಜಾನೆಯಿಂದಾಗಲಿ ಅಥವಾ ಶಾಸಕರ ವೈಯಕ್ತಿಕ ಆದಾಯದಿಂದಾಗಲಿ ನೀಡುತ್ತಿಲ್ಲ. ಬದಲಾಗಿ ಜನರು ಪಾವತಿಸುವ ತೆರಿಗೆ ಹಣದಿಂದಲೇ ನೀಡಲಾಗುತ್ತಿದೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಜನರ ಹಣವನ್ನೇ ಜನರಿಗೆ ಸೌಲಭ್ಯವಾಗಿ ನೀಡಿ, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನರ ಮೇಲೆಯೇ ಆರ್ಥಿಕ ಹೊರೆ ಹೇರುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕುವ ಜೊತೆಗೆ ಬಸ್ ಪ್ರಯಾಣ ದರ ಹೆಚ್ಚಳವನ್ನು ಹಿಂಪಡೆಯಲು ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.



