ಧರ್ಮಸ್ಥಳದಲ್ಲಿ 2000ರಿಂದ 2014ರವರೆಗೆ 1,510 ಅಸಹಜ ಸಾವುಗಳು ಸಂಭವಿಸಿವೆ ಎಂಬ ಆರೋಪಕ್ಕೆ ಧರ್ಮಸ್ಥಳದ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಖ್ಯೆ ಸತ್ಯಕ್ಕೆ ದೂರವಾಗಿದ್ದು, ಊಹಾಪೋಹದ ಆಧಾರದಲ್ಲಿ ಪ್ರಚಾರ ಮಾಡಲಾಗುತ್ತಿದೆ ಎಂದು ಧರ್ಮಸ್ಥಳ ನಿವಾಸಿ ಶ್ರೀನಿವಾಸ್ ರಾವ್ ಆರೋಪಿಸಿದ್ದಾರೆ.

ಧರ್ಮಸ್ಥಳದಲ್ಲಿ ಗ್ರಾಮಸ್ಥರ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯ ಪ್ರಕರಣದ ನ್ಯಾಯ ಹೋರಾಟವನ್ನು ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಸೌಜನ್ಯ ಪ್ರಕರಣದ ತನಿಖೆ ಹಾಗೂ ನ್ಯಾಯದ ಹೋರಾಟವನ್ನು ಬೇರೆ ಬೇರೆ ಆಯಾಮಗಳಿಗೆ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ. ಇದರೊಂದಿಗೆ ಧರ್ಮಸ್ಥಳ ಕ್ಷೇತ್ರ ಮತ್ತು ಗ್ರಾಮಸ್ಥರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿದೆ. ಸೌಜನ್ಯಳ ಕೊಲೆ ಮಾಡಿದವರು ಯಾರೇ ಆಗಿರಲಿ, ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂಬುದು ನಮ್ಮ ಸ್ಪಷ್ಟ ನಿಲುವು. ಸೌಜನ್ಯಳಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
2000ರಿಂದ 2014ರವರೆಗೆ ಧರ್ಮಸ್ಥಳದಲ್ಲಿ 1,510 ಯುಡಿಆರ್ ಪ್ರಕರಣಗಳು ದಾಖಲಾಗಿವೆ ಎಂಬ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ಆದರೆ ಇಲಾಖೆಯಿಂದ ದೊರೆತ ಮಾಹಿತಿಯ ಪ್ರಕಾರ ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ದಾಖಲಾಗಿರುವುದು 374 ಪ್ರಕರಣಗಳು ಮಾತ್ರ. ಇದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇವೆ ಎಂದು ಶ್ರೀನಿವಾಸ್ ರಾವ್ ಸ್ಪಷ್ಟಪಡಿಸಿದರು.
1,510 ಎಂಬ ಸಂಖ್ಯೆಯನ್ನು ಊಹಾಪೋಹದ ಆಧಾರದಲ್ಲಿ ಸೃಷ್ಟಿಸಲಾಗಿದೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ ಅವರು, ಈ ಸಂಖ್ಯೆಯ ಸತ್ಯಾಸತ್ಯತೆಯನ್ನು ಸರ್ಕಾರ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಆಧಾರರಹಿತ ಸುದ್ದಿಗಳಿಂದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ರಾಜ್ಯ ಹಾಗೂ ದೇಶಾದ್ಯಂತ ಅಪನಂಬಿಕೆ ಮೂಡುವಂತಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸರ್ಕಾರ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಜಯಂತ್ ಟಿ. ಅವರ ವಿರುದ್ಧವೂ ಆರೋಪಗಳನ್ನು ಮಾಡಿದ ಅವರು, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಆರೋಪಗಳ ಹಿಂದೆ ದೊಡ್ಡ ಷಡ್ಯಂತ್ರವಿದೆ. ಈ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.
ಸೌಜನ್ಯ ಪ್ರಕರಣದಲ್ಲಿ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂಬುದೇ ನಮ್ಮ ಆಶಯ. ಆದರೆ ನ್ಯಾಯದ ಹೋರಾಟದ ಹೆಸರಿನಲ್ಲಿ ಧರ್ಮಸ್ಥಳ ಕ್ಷೇತ್ರ ಮತ್ತು ಗ್ರಾಮಸ್ಥರ ಗೌರವಕ್ಕೆ ಧಕ್ಕೆ ತರುವ ಪ್ರಯತ್ನಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಶ್ರೀನಿವಾಸ್ ರಾವ್ ತಿಳಿಸಿದರು.



