ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳವಾರ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಂಸದರ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸ್ಥಳೀಯ ಸಮಸ್ಯೆಗಳು, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ವಿವಿಧ ಸಾರ್ವಜನಿಕ ಬೇಡಿಕೆಗಳ ಕುರಿತು ಸಂಸದರಿಗೆ ಮನವಿ ಸಲ್ಲಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಸಂಸದರು, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ, ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ, ಸುಬ್ರಹ್ಮಣ್ಯ–ಸಕಲೇಶಪುರ ಘಾಟ್ ವಿಭಾಗದ ರೈಲ್ವೆ ವಿದ್ಯುದೀಕರಣ ಕಾಮಗಾರಿ, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಗೊಂಡ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಹಾಗೂ ಮಂಗಳೂರು–ಬೆಂಗಳೂರು ರೈಲು ಮಾರ್ಗದ ದ್ವಿಪಥೀಕರಣಕ್ಕಾಗಿ ನಿರಂತರ ಪ್ರಯತ್ನ ನಡೆಸುತ್ತಿರುವ ಸಂಸದರನ್ನು ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭೇಟಿಯಾಗಿ ಅಭಿನಂದಿಸಿದರು.



