ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಹಾಗೂ ಡಿಜಿಟಲ್ ಹಣಕಾಸು ವಂಚನೆ ಪ್ರಕರಣಗಳ ತನಿಖೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮಾಂತರ ಸೈಬರ್ ಅಪರಾಧ ಪೊಲೀಸ್ ಠಾಣೆಯನ್ನು ಬಂಟ್ವಾಳಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭಗೊಂಡಿದೆ.

ಬಿ.ಸಿ.ರೋಡ್‌ನ ಬಂಟ್ವಾಳ ನಗರ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಬ್ರಿಟಿಷರ ಕಾಲದ ಹಳೆಯ ಜೈಲು ಕಟ್ಟಡವನ್ನು ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಿ ಸೈಬರ್ ಪೊಲೀಸ್ ಠಾಣೆಯನ್ನಾಗಿ ಪರಿವರ್ತಿಸಲಾಗಿದೆ. ಡಿವೈಎಸ್ಪಿ, ಇನ್ಸ್‌ಪೆಕ್ಟರ್, ಪಿಎಸ್‌ಐ ಹಾಗೂ ಸಿಬ್ಬಂದಿಗೆ ಪ್ರತ್ಯೇಕ ಕೊಠಡಿಗಳನ್ನು ನಿರ್ಮಿಸುವುದರ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ.
ಸದ್ಯ ಠಾಣೆಗೆ ಸಿಬ್ಬಂದಿ ಹಾಗೂ ಅಗತ್ಯ ಪರಿಕರಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಠಾಣೆ ಕಾರ್ಯಾರಂಭಿಸಿದ ಬಳಿಕ ಸುಳ್ಯ ಸೇರಿದಂತೆ ಜಿಲ್ಲೆಯ ದೂರದ ಗ್ರಾಮಾಂತರ ಪ್ರದೇಶಗಳ ಜನರು ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಮಂಗಳೂರಿಗೆ ತೆರಳುವ ಅನಿವಾರ್ಯತೆ ತಪ್ಪಲಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಸೈಬರ್ ಪೊಲೀಸ್ ಸೇವೆ ಸ್ಥಳೀಯವಾಗಿಯೇ ಲಭ್ಯವಾಗಲಿದೆ.



