ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಸೇರಿದಂತೆ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಿಎಂ ಡಿವಿ ಸದಾನಂದಗೌಡ ಸೇರಿದಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ.

ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.
ಈ ಬಾರಿ ಬಿಜೆಪಿ ಒಟ್ಟು 8 ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ. ಮೈಸೂರು ಸಂಸದ, ಪ್ರತಾಪ್ ಸಿಂಹ, ಬೆಂಗಳೂರು ಉತ್ತರ ಸಂಸದ ಡಿವಿ ಸದಾನಂದ ಗೌಡ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಹಾವೇರಿ ಸಂಸದ ಶಿವಕುಮಾರ್ ಉದಾಸಿ, ತುಮಕೂರು ಸಂಸದ ಜಿಎಸ್ ಬಸವರಾಜು(ನಿವೃತ್ತಿ ಘೋಷಿಸಿದ್ದರು) ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್(ನಿವೃತ್ತಿ ಘೋಷಿಸಿದ್ದರು), ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ.




