ಮಂಗಳೂರು: ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಮಂಗಳೂರು ತಾಲೂಕಿನ ಸುರತ್ಕಲ್ ಹೋಬಳಿಯ ಕುಳಾಯಿ ಗ್ರಾಮದಲ್ಲಿ ನಡೆದಿದೆ.

ಸಂತೋಷ್ (34) ಮೃತ ದುರ್ದೈವಿ. ಭಾರಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದಿದ್ದು, ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ವಿದ್ಯುತ್ ತಂತಿ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತನ ಕುಟುಂಬಸ್ಥರಿಗೆ ಇಲಾಖೆಯ ವತಿಯಿಂದ 5 ಲಕ್ಷ ರೂ. ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಭಾರಿ ಮಳೆ ಹಿನ್ನೆಲೆ ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ: ಮಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು ನಗರ ಪ್ರದಕ್ಷಿಣೆ ಕೈಗೊಂಡಿದ್ದರು. ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ಗಳು ಸೇರಿದಂತೆ ಇತರ ಅಧಿಕಾರಿಗಳು ಜೊತೆಗಿದ್ದರು.



