ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದ ಮನೆಯಲ್ಲಿಯೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು, ಕಚೇರಿಗೆ ಕರೆದೊಯ್ಯುತ್ತಿದ್ದಾರೆ.

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿದ್ದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ.
ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳ್ಳುತ್ತಿದ್ದಂತೆ ಹೆಚ್.ಡಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿತ್ತು. ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಆಗಮಿಸಿದ್ದರು.
ದೇವೇಗೌಡರ ಮನೆಯಲ್ಲಿ ರೇವಣ್ಣ ಅವರು ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದು ಮನೆಯ ಮುಂಬಾಗಿಲು ಹಾಗೂ ಹಿಂಬಾಗಿಲಿನಲ್ಲಿ ನಿಂತುಕೊಂಡಿದ್ದರು. ಇನ್ನು ರೇವಣ್ಣ ಮನೆಯಿಂದ ಹೊರಬರುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದ ಮನೆಯಲ್ಲಿಯೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು, ಕಚೇರಿಗೆ ಕರೆದೊಯ್ಯುತ್ತಿದ್ದಾರೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ರೇವಣ್ಣ ಹಾಗೂ ಇತರರು ಅಪಹರಣ ಮಾಡಿದ್ದರು. ಈ ಮೂಲಕ ಸಂತ್ರಸ್ತೆಯನ್ನು ಬೆದರಿಸಲು ಯತ್ನಿಸಿದ್ದರು. ಇದೇ ಕಾರಣಕ್ಕೆ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಚೇರಿಗೆ ಕರೆದೊಯ್ದು, ಬಂಧನದ ಕಾನೂನು ಪ್ರಕ್ರಿಯೆ ನಡೆಸಲಾಗುವುದು’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.



