ಬೆಂಗಳೂರು: ಮುಂಗಾರು ಮಳೆ ಆರಂಭದ ನಂತರ, ರಾಜ್ಯದ ನಾನಾ ಭಾಗಗಳಲ್ಲಿ ಎಡಬಿಡದೆ ಸುರಿಯುತ್ತಿದೆ. ಇನ್ನೂ ಕೆಲವು ಕಡೆಗಳಲ್ಲಿ ಭೂಮಿ ಹದಗೊಳ್ಳುವಷ್ಟು ಮಳೆಯಾಗದೇ, ಭಿತ್ತನೆಗಾಗಿ ರೈತರು ಮಳೆರಾಯನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಇಂದಿನಿಂದ ರಾಜ್ಯಾಧ್ಯಂತ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ರಾಜ್ಯ ಹವಾಮಾನ ಇಲಾಖೆಯು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಕೂಡ ಮಳೆಯಾಗಲಿದೆ ಎಂದು ತಿಳಿಸಿದೆ.
ಇನ್ನೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜುಲೈ.9ರ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಹಳದಿ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಕೆಲವೆಡೆ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಅಲ್ಲದೇ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಅಂದಹಾಗೇ ರಾಜ್ಯಾಧ್ಯಂತ ಮುಂಗಾರು ಮಳೆಯ ಆರ್ಭಟಕ್ಕೆ ಈವರೆಗೆ 21 ಮಂದಿ ಬಲಿಯಾಗಿದ್ದರೇ, 40ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿದ್ದಾವೆ ಎಂಬುದಾಗಿ ನಿನ್ನೆಯಷ್ಟೇ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದರು.



