ಕಳೆದ ಐದು ದಿನಗಳಿಂದ ಹಾಸನ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಮಲೆನಾಡು ಭಾಗವಾದ ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ವರುಣನ ಆರ್ಭಟಕ್ಕೆ ಅಲ್ಲಿನ ಜನರು ತತ್ತರಿಸಿದ್ದಾರೆ. ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಸಕಲೇಶಪುರದ ವರೆಗೆ ತೆರಳುವ ಸಾರಿಗೆ ಬಸ್ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗುತ್ತಿದೆ. ಮಂಗಳೂರು ಕಡೆಗೆ ಹೋಗುವ ಬಸ್ಗಳಿಗೂ ಹಾಸನ ತಾಲ್ಲೂಕಿನ ಕಂದಲಿ ಬಳಿ ತಡೆಯೊಡ್ಡಲಾಗುತ್ತಿದೆ. ವಾಹನಗಳನ್ನು ತಡೆದು ಗುಡ್ಡ ಕುಸಿತದ ಬಗ್ಗೆ ಮಾಹಿತಿ ನೀಡಿ ವಾಪಸ್ ಕಳುಹಿಸಲಾಗುತ್ತಿದೆ. ರಸ್ತೆಗೆ ಬ್ಯಾರಿಕೇಡ್ ಹಾಕಿ ವಾಹನಗಳಿಗೆ ತಡೆಯೊಡ್ಡಲಾಗುತ್ತಿದೆ.



