ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಸಮಾರಂಭ ಬಿಸಿರೋಡಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಅನೇಕ ಆಚರಣೆಗಳು ನಡೆಯುತ್ತವೆ ಆದರೆ ಸರಕಾರಿ ಆಚರಣೆಗಳು ಸರಕಾರದ ಅದೇಶಕ್ಕೆ ಸೀಮಿತವಾಗಿದೆ. ಇದರ ಸದುಪಯೋಗ ಸಾಮಾನ್ಯ ಜನರಿಗೆ ಸಿಗುವಂತೆ ಆಗಬೇಕು, ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಯಾಗಬೇಕು ಎಂದು ತಿಳಿಸಿದರು. ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯ ಬಗ್ಗೆ ನಾವು ಜೀವನದಲ್ಲಿ ಅಳವಡಿಸಿಕೊಳ್ಳಲು ಅವರು ತಿಳಿಸಿದರು.
ಅಂಬೇಡ್ಕರ್ ಭವನದಲ್ಲಿ ಸುಸಜ್ಜಿತ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸುವ ಸಲುವಾಗಿ ಸೀಲಿಂಗ್ ನ ವ್ಯವಸ್ಥೆ ಆಗಬೇಕಾಗಿದೆ, ಅದಕ್ಕೆ ಶಾಸಕರ ನಿಧಿಯಿಂದ ಹಣ ನೀಡುವುದಾಗಿ ಭರವಸೆ ನೀಡಿದರು.
ಕೇಪು ಕಲ್ಲಂಗಳ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಗುಣಶ್ರೀ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾತನಾಡಿದರು.
ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಬಿಸಿರೋಡಿನ ಸರ್ಕಲ್ ಬಳಿಯಿಂದ ಅಂಬೇಡ್ಕರ್ ಭವನದ ವರೆಗೆ ವಿಶೇಷ ಆಕರ್ಷಣೆಯ ಜಾಥ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಜಯಂತಿ ಎಸ್.ಪೂಜಾರಿ, ತಹಶಿಲ್ದಾರ್ ಅರ್ಚನಾ ಭಟ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಜಿಲ್ಲಾ ಮಟ್ಟದ ಜಾಗೃತಿ ಅಧಿಕಾರಿ ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.



