ಉಡುಪಿ ಬಳಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ವೇಳೆ ಕೊಡಂಕೂರು ಗಣೇಶ್ ಮಾರ್ಬಲ್ ಬಳಿ ರಾಷ್ಟೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ರೋಯ್ ಡೈಲನ್ ಡಾಯಸ್ ಎಂದು ಗುರ್ತಿಸಲಾಗಿದೆ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟುತ್ತಿದ್ದ ರೋಯ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಪಘಾತ ಉಂಟು ಮಾಡಿದ ಕಾರಿನ ಚಾಲಕ ಕಾರನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



