ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ವಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರ ಮಾಹಿತಿ ಪ್ರಕಾರ, ಬೆಳಿಗ್ಗೆ 6.30ರ ಸುಮಾರಿಗೆ ಅವರಿಗೆ ಕರೆ ಬಂದಿದ್ದು, ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹಲವರು ಪ್ರಜ್ಞಾಹೀನರಾಗಿ ಪತ್ತೆಯಾಗಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ನಂತರ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದರು.
ಅಗ್ನಿ ಅಪಘಾತದಲ್ಲಿ ಎಂಟು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರಲ್ಲಿ ಮಕ್ಕಳೂ ಇದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಸುಮಾರು 20 ಜನರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಸ್ಥಳದಲ್ಲಿ ಎಐಎಂಐಎಂ ಶಾಸಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಮತ್ತು ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಲಾಗಿದೆ ಎಂದು ಸಿಎಂಒ ಅಧಿಕೃತ ಪ್ರಕಟಣೆ ತಿಳಿಸಿದೆ.



