ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.

ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಮುಂಭಾಗಕ್ಕೂ ಹಾನಿಯಾಗಿದೆ. ಸ್ಥಳೀಯರು ವಾಹನಗಳನ್ನು ತೆರವುಗೊಳಿಸಿ, ಸಂಚಾರ ಸುಗಮಗೊಳಿಸಲು ಹರಸಾಹಸಪಡುತ್ತಿದ್ದಾರೆ. ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಸ್ ಚಾಲಕ ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಪ್ರಣಯ್ ಮತ್ತು ಕನಕಪುರ ನಿವಾಸಿ ಮಂಜುನಾಥ ಗಾಯಗೊಂಡವರಾಗಿದ್ದಾರೆ.



