ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ತುರ್ತು ಸಭೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸಿದ್ದಾರೆ. 
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ, ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ, ಸಮುದಾಯಕ್ಕೆ ಆಗಿರುವ ಅನ್ಯಾಯ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಮಾತನಾಡುತ್ತಿದ್ದಂತೆ ಕಾರ್ಯಕರ್ತರು ವೇದಿಕೆಗೆ ನುಗ್ಗಿ ”ಬೇಕೆ ಬೇಕು ನಮಗೆ ನ್ಯಾಯಬೇಕು ಎಂದು ಆಗ್ರಹಿಸಿದ್ದಾರೆ. ನಾವು ರಾಜೀನಾಮೆ ನೀಡುವ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದ ಕಾರಣ ಸಭಾಂಗಣದಲ್ಲಿ ಏನು ನಡೆಯುತ್ತಿದೆ ಎಂದು ಯಾರಿಗೂ ಕೇಳಿಸದಷ್ಟು ಗದ್ದಲವುಂಟಾಯಿತು. ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಮುಖಂಡರು ಹರಸಾಹಸಪಟ್ಟಿದ್ದಾರೆ.



