ಉಡುಪಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಫೀಲ್ಡಿಗಿಳಿದು ಕೆಲಸ ಮಾಡಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಇವರು ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಡಲ ಕೊರೆತ ತಡೆಗಟ್ಟುವ ಸಲುವಾಗಿ 4.50 ಕೋಟಿ ಹಣ ಬಿಡುಗಡೆಯಾಗಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದ್ರು. ಕಾಪು ತಾಲೂಕಿನ ಹೆಜ್ಮಾಡಿಯಿಂದ ಬೈಂದೂರಿನ ಶಿರೂರುವರೆಗೆ ಕಡಲ ಕೊರೆತ ಸ್ಥಳಗಳನ್ನು ಗುರುತಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಬಂದರು ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.



