ಪ್ರಸ್ತುತ ಭಾರತದಲ್ಲಿ ಒಂದಲ್ಲ ಒಂದು ಕಾರಣಕ್ಕೆ 30ಕೋಟಿ ಮಂದಿ ಸಹಕಾರಿ ಕ್ಷೇತ್ರದ ಸದಸ್ಯತ್ವವನ್ನು ಹೊಂದಿದ್ದಾರೆ.

ಮುಂದಿನ 5-10ವರ್ಷಗಳಲ್ಲಿ ಈ ಸಂಖ್ಯೆ ದುಪ್ಪಟ್ಟು ಆಗಿ, ನಮ್ಮ ದೇಶದ ಒಟ್ಟು ಜನಸಂಖ್ಯೆಯ ಶೇ.50ರಷ್ಟು ಮಂದಿ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆದುದರಿಂದ ದೇಶದ ಮುಂದಿನ ಭವಿಷ್ಯ ಸಹಕಾರಿ ಕ್ಷೇತ್ರದ ಕೈಯಲ್ಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಾಜ್ಯದ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನೆಯನ್ನು ಉಡುಪಿಯ ಹೊಟೇಲ್ ಡಯಾನ ಸಭಾಂಗಣದಲ್ಲಿ ನೆರವೇರಿಸಿ ಅವರು ಮಾತನಾಡಿದ್ರು. ಭಾರತದಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ವಿಸ್ತಾರವಾಗಿ ಬೆಳೆಯುತ್ತಿದ್ದು, ಮುಂದೆ ಇಡೀ ಆಡಳಿತ ವ್ಯವಸ್ಥೆಯೇ ಸಹಕಾರಿ ಕ್ಷೇತ್ರದ ಮೂಲಕ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಸಹಕಾರಿ ಸಂಸ್ಥೆಗಳಿಗೆ ಪೆಟ್ರೋಲ್ ಬಂಕ್ ಹಾಗೂ ಗ್ಯಾಸ್ ಏಜೆನ್ಸಿಯಲ್ಲಿ ಪ್ರಥಮ ಪ್ರಾಶಸ್ತ್ಯ ಯೋಚನೆ ಕೇಂದ್ರ ಸರಕಾರದ ಮುಂದಿದೆ. ಅಲ್ಲದೆ ಸಹಕಾರಿ ಸಂಸ್ಥೆಗಳ ಮೂಲಕ ವೊಲ್ವೋ ಸಹಿತ ಸಾರಿಗೆ ವ್ಯವಸ್ಥೆ ಮುನ್ನಡೆಸಲು ಯೋಜಿಸಲಾಗಿದೆ ಎಂದ್ರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಸಿಎ ಜಿ.ನಂಜನಗೌಡ ವಹಿಸಿದ್ರು.



