ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ / ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು ನಮ್ಮ ಇಲಾಖೆಗೆ ಹೆಚ್ಚು ಸೂಕ್ತವಾಗುತ್ತಾರೆ. ಈಗಾಗಲೇ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ. ಮುಂದಿನ ನೇಮಕಾತಿ ಸಂದರ್ಭದಲ್ಲಿ ಹೆಚ್ಚು ಆದ್ಯತೆ ನೀಡುವ ಸಂಬ0ಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವೆ, ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಕೌಶಾಲ್ಯಭಿವೃದ್ದಿ ಸಚಿವರ ಜೊತೆಗೂ ಚರ್ಚೆ ನಡೆಸಿ ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.



