ಬಿಜೆಪಿಯವರು ಮಾಡಿದ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಹಿನ್ನಡೆಯಾಗಿದೆ. ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕೂಡ ಮತಗಳ್ಳತನದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯ ಕೆ.ಎಂ.ಮಾರ್ಗ ಬಳಿಯಿರುವ ಎಲ್‌ಐಸಿ ಡೈಮಂಡ್ ಜುಬಿಲಿ ಹಾಲ್‌ನಲ್ಲಿ ಶುಕ್ರವಾರ ನಡೆದ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷದ ಶಕ್ತಿ ಕುಂದಿಲ್ಲ ಎಂದರು. ವಿಧಾನಸಭೆ ಚುನಾವಣೆಯಲ್ಲಿ 135 ಸೀಟುಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ, ನಮಗೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಆಯಿತು.

ಇದಕ್ಕೆ ಕಾರಣ ಮತಗಳ್ಳತನ. ಮುಂದೆ ನಡೆಯುವ ಬಿಹಾರ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವನ್ನು ಸೋಲಿಸುವ ಸಲುವಾಗಿ ಈಗಾಗಲೇ 85 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ. ಕೈಬಿಟ್ಟ ಮತದಾರರ ಪಟ್ಟಿಯನ್ನು ನೀಡದೆ, ಚುನಾವಣಾ ಆಯೋಗ ಪರೋಕ್ಷವಾಗಿ ಬಿಜೆಪಿಗೆ ಬೆಂಬಲಿಸುತ್ತಿದೆ ಎಂದು ಸಚಿವರು ಆರೋಪಿಸಿದರು. ಸಮಾರಂಭದಲ್ಲಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರ್, ಎಂ.ಎ.ಗಫೂರ್, ಪ್ರಸಾದ್ ಕಾಂಚನ್, ರಮೇಶ್ ಕಾಂಚನ್, ಕಿಶನ್ ಶೆಟ್ಟಿ, ಹರೀಶ್ ಕಿಣಿ, ದೀಪಕ್ ಕೊಟ್ಯನ್, ಭುಜಂಗ ಶೆಟ್ಟಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.



