ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕಾಣೆಯಾದವರನ್ನು ಕೊಟ್ಟಾಯಂ ಜಿಲ್ಲೆಯ ಚಂಗನಾಶೇರಿ ನಿವಾಸಿಗಳಾದ ಅಂಗಿತ್ ಹಾಗೂ ಅಪ್ಪು ಟಿ. ಎಬ್ರಹಾಂ ಎಂದು ಗುರುತಿಸಲಾಗಿದೆ. ನಾಲ್ವರು ವಿದ್ಯಾರ್ಥಿಗಳ ತಂಡ ಪಳ್ಳಿಕರೆ ಬೀಚ್‌ಗೆ ಭೇಟಿ ನೀಡಿದ್ದು, ಸಂಜೆ ವೇಳೆ ಸಮುದ್ರದಲ್ಲಿ ಈಜಲು ಇಳಿದಿದ್ದರು. ಈ ಸಂದರ್ಭದಲ್ಲಿ ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದಾರೆ. ಉಳಿದ ಇಬ್ಬರು ವಿದ್ಯಾರ್ಥಿಗಳು ಸ್ಥಳೀಯರ ನೆರವಿನಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸಂಜೆ ಸುಮಾರು 6.30ರ ವೇಳೆಗೆ ಘಟನೆ ಸಂಭವಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಬೇಕಲ ಪೊಲೀಸರು, ಸ್ಥಳೀಯ ಮೀನುಗಾರರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಕಾಣೆಯಾದ ವಿದ್ಯಾರ್ಥಿಗಳ ಪತ್ತೆಗಾಗಿ ರಾತ್ರಿ ಹೊತ್ತಿನಲ್ಲಿಯೂ ಕಾರ್ಯಾಚರಣೆ ಮುಂದುವರಿದಿದ್ದು, ಸೋಮವಾರವೂ ವ್ಯಾಪಕ ಶೋಧ ನಡೆಸಲಾಗುತ್ತಿದೆ. ಈ ಘಟನೆ ಪ್ರವಾಸಿಗರ ಸುರಕ್ಷತೆ ಹಾಗೂ ಅಪಾಯಕಾರಿ ಕಡಲತೀರ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ.



