ಗುಡ್ಡದಲ್ಲಿ ಸೊಪ್ಪು ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ 82 ವರ್ಷದ ವೃದ್ಧರೊಬ್ಬರು ಮೃತಪಟ್ಟಿರುವ ದುರ್ಘಟನೆ ಬಂಟ್ವಾಳ ತಾಲೂಕಿನ ಮೊಡಂಕಾಪು ಗ್ರಾಮದ ರಾಜೀವ ಪಲಿಕೆ ಎಂಬಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು ಕೃಷ್ಣಪ್ಪ ಕುಲಾಲ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಕೃಷ್ಣಪ್ಪ ಕುಲಾಲ್ ಅವರು ಮನೆಯ ಸಮೀಪದ ಗುಡ್ಡದಲ್ಲಿ ಸೊಪ್ಪು ಕೊಯ್ಯುವ ಕೆಲಸ ಮಾಡುತ್ತಿದ್ದರು. ಈ ವೇಳೆ ಶಂಭೂರು ಎ.ಎಂ.ಆರ್. ಸ್ಥಾವರದಿಂದ ವಿದ್ಯುತ್ ಪೂರೈಕೆಯಾಗುವ 110 ಕೆ.ವಿ. ಹೈಟೆನ್ಷನ್ ವಿದ್ಯುತ್ ಮಾರ್ಗದ ಕೆಳಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಗೊಂಡು ತೀವ್ರ ಆಘಾತಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿದ್ದವರು ತಕ್ಷಣ ನೆರವಿಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಪೊಲೀಸ್ ಅಧಿಕಾರಿಗಳು ಹಾಗೂ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ನಿಖರ ಕಾರಣವೇನು ಹಾಗೂ 110 ಕೆ.ವಿ. ಹೈಟೆನ್ಷನ್ ವಿದ್ಯುತ್ ಮಾರ್ಗದ ಕೆಳಭಾಗದಲ್ಲಿ ವಿದ್ಯುತ್ ಸ್ಪರ್ಶ ಹೇಗೆ ಸಂಭವಿಸಿತು ಎಂಬುದರ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



