ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಖಂಡಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸರ್ ಅಹ್ಮದ್, ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಸುಸಜ್ಜಿತ ಸೌಲಭ್ಯಗಳನ್ನು ಕಲ್ಪಿಸಿ, 2026ರ ಸೆಪ್ಟೆಂಬರ್ 30ರೊಳಗೆ ನೂತನ ಕಟ್ಟಡದಲ್ಲಿ ಆಸ್ಪತ್ರೆ ಸೇವೆ ಆರಂಭಿಸಬೇಕು ಎಂದು ಆಗ್ರಹಿಸಿದರು.
ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದಿದ್ದರೂ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ನೀಡಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
ಜನರಿಗೆ ಅಗತ್ಯವಿರುವ ಆರೋಗ್ಯ ಸೇವೆಗಳು ಶೀಘ್ರವಾಗಿ ಲಭ್ಯವಾಗುವಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅನ್ಸರ್ ಅಹ್ಮದ್ ಒತ್ತಾಯಿಸಿದರು.



