ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಮೂಲದ ಅಂತಾರಾಜ್ಯ ಕಳ್ಳನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇರಳದ ಕಾಸರಗೋಡು ನಿವಾಸಿ ಸತೀಶ್ ಬಂಧಿತ ಆರೋಪಿ. ಬಂಧಿತನಿಂದ ಕಳವು ಮಾಡಲಾಗಿದ್ದ ಕಾಣಿಕೆ ಡಬ್ಬಿ ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೇವಸ್ಥಾನದ ಆಡಳಿತ ಪದಾಧಿಕಾರಿ ವಿನೋದ್ ಕುಮಾರ್ ಬಿ. ಅವರು ನೀಡಿದ ದೂರಿನಂತೆ, ಆಗಸ್ಟ್ 25ರಂದು ಬೆಳಗ್ಗೆ ದೇವಸ್ಥಾನಕ್ಕೆ ತೆರಳಿದಾಗ ಹೊರಭಾಗದಲ್ಲಿದ್ದ ಕಾಣಿಕೆ ಡಬ್ಬಿ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿತ್ತು. ಬಳಿಕ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ, ಆಗಸ್ಟ್ 24ರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಕಾಣಿಕೆ ಡಬ್ಬಿಯನ್ನು ಕದ್ದು ಕೊಂಡೊಯ್ಯುತ್ತಿರುವ ದೃಶ್ಯ ಪತ್ತೆಯಾಗಿತ್ತು.
ಕಾಣಿಕೆ ಡಬ್ಬಿಯ ಮೌಲ್ಯ ಸುಮಾರು 2,500 ರೂ. ಆಗಿದ್ದು, ಅದರಲ್ಲಿದ್ದ ಸುಮಾರು 4,500 ರೂ. ಕಾಣಿಕೆ ಹಣ ಸೇರಿದಂತೆ ಒಟ್ಟು 7,000 ರೂ. ನಷ್ಟವಾಗಿತ್ತು. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ಕೇರಳದ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಭಾಗಗಳಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ತನಿಖೆಯ ಮುಂದುವರಿದ ಭಾಗವಾಗಿ ಬದಿಯಡ್ಕದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಸತೀಶನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ ಕಳವು ಮಾಡಲಾಗಿದ್ದ ಕಾಣಿಕೆ ಡಬ್ಬಿ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



