ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 3 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವುಗೈದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಿ.ಸಿ.ರೋಡ್ ಬಸ್ ನಿಲ್ದಾಣದ ಹಿಂಭಾಗದ ಅನುಗ್ರಹ ನಿವಾಸಿ ಶೃತಿ ಪೈ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಶೃತಿ ಪೈ ಅವರು ತಮ್ಮ ಅತ್ತೆಯೊಂದಿಗೆ ಗೋವಾದ ಮಡಗಾವ್‌ನಲ್ಲಿರುವ ತಾಯಿ ಮನೆಗೆ ತೆರಳಿದ್ದರು.
ಸೆಪ್ಟೆಂಬರ್ 4ರಂದು ಮಡಗಾವ್‌ನಿಂದ ವಾಪಸ್ ಬಂದು ಮನೆಯಿಂದ ಬಟ್ಟೆಗಳನ್ನು ತೆಗೆದುಕೊಂಡು ಬಾಗಿಲಿಗೆ ಬೀಗ ಹಾಕಿ, ಬಳಿಕ ಮಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿ ಅಲ್ಲಿಯೇ ಉಳಿದುಕೊಂಡಿದ್ದರು.

ಸೆಪ್ಟೆಂಬರ್ 6ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಮನೆಗೆ ವಾಪಸ್ ಬಂದಾಗ ಮುಂಭಾಗದ ಬಾಗಿಲು ತೆರೆದಿರುವುದು ಕಂಡುಬಂದಿದೆ. ಒಳಗೆ ಪರಿಶೀಲಿಸಿದಾಗ ಮೂರು ಕೊಠಡಿಗಳ ಬೀಗಗಳು ಮುರಿದಿದ್ದು, ಗಾಡ್ರೇಜ್‌ನಲ್ಲಿದ್ದ ಬಟ್ಟೆ ಹಾಗೂ ದಾಖಲೆಗಳು ಚೆಲ್ಲಾಪಿಲ್ಲಿಯಾಗಿದ್ದವು.
ಬಳಿಕ ಗಾಡ್ರೇಜ್‌ನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಶೃತಿ ಪೈ ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



