ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಈ ವೇಳೆ ಭಾರತ–ಅಮೆರಿಕ ದ್ವಿಪಕ್ಷೀಯ ಸಹಕಾರದ ಪ್ರಗತಿಯನ್ನು ಪರಿಶೀಲಿಸಿದ ಉಭಯ ನಾಯಕರು ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು ಚರ್ಚಿಸಿದರು.

ಮಾತುಕತೆ ಫಲಪ್ರದವಾಗಿದ್ದು, ಭಾರತ–ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದುವರಿಸಲು ಉಭಯ ನಾಯಕರು ಬದ್ಧತೆ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಎರಡೂ ದೇಶಗಳ ಜನರ ಹಿತದೃಷ್ಟಿಯಿಂದ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಿರಂತರ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ.
ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆಯೂ ಮೋದಿ ಮತ್ತು ಟ್ರಂಪ್ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ. ಜಾಗತಿಕ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ಪ್ರಯತ್ನಗಳ ಕುರಿತು ಸಹ ಚರ್ಚೆ ನಡೆಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಮಾತುಕತೆಯ ಬಳಿಕ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿ, ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫಲಪ್ರದ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯಲು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ. ಉಭಯ ನಾಯಕರು ಮುಂದೆಯೂ ಪರಸ್ಪರ ಸಂಪರ್ಕದಲ್ಲಿರಲು ನಿರ್ಧರಿಸಿದ್ದಾರೆ.



