ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ ಮಾಡುವ ಕುರಿತು ಚಿಂತನೆ ನಡೆದಿದೆ.

ಪ್ರಸ್ತುತ ಕಚೇರಿಗಳಿಗೆ ತೆರಳುವ ಉದ್ಯೋಗಿಗಳು ಹಾಗೂ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಬಹುತೇಕ ಒಂದೇ ಸಮಯದಲ್ಲಿ ರಸ್ತೆಗೆ ಆಗಮಿಸುತ್ತಿರುವುದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಗಿನ ಪೀಕ್ ಅವರ್‌ನಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಉದ್ಯೋಗಿಗಳು ಸಂಚಾರ ಸಮಸ್ಯೆ ಎದುರಿಸುವಂತಾಗಿದೆ.
ಈ ಹಿನ್ನೆಲೆಯಲ್ಲಿ ಶಾಲೆಗಳ ಆರಂಭದ ಸಮಯವನ್ನು ಪ್ರಸ್ತುತ ವೇಳಾಪಟ್ಟಿಗಿಂತ ಅರ್ಧ ಗಂಟೆ ಮುಂಚಿತವಾಗಿ ಅಥವಾ ಅರ್ಧ ಗಂಟೆ ತಡವಾಗಿ ನಿಗದಿಪಡಿಸುವ ಕುರಿತು ಚರ್ಚೆ ನಡೆಯುತ್ತಿದೆ. ಶಾಲೆಗಳ ಸಮಯದಲ್ಲಿ ಕೊಂಚ ಬದಲಾವಣೆ ಮಾಡಿದರೆ ಬೆಳಗಿನ ಗರಿಷ್ಠ ಸಂಚಾರದ ಅವಧಿಯಲ್ಲಿ ವಾಹನ ದಟ್ಟಣೆ ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇದೆ.
ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಶಾಲಾ ಸಮಯ ಬದಲಾವಣೆ ಕುರಿತು ಕ್ರಮ ಕೈಗೊಳ್ಳುವ ಚಿಂತನೆ ನಡೆದಿದ್ದು, ಈ ಸಂಬಂಧ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಸಾರ್ವಜನಿಕರಿಂದಲೂ ಶಾಲಾ ಸಮಯ ಬದಲಾವಣೆಗೆ ಮನವಿ ಸಲ್ಲಿಕೆಯಾಗಿದೆ.
ಈ ಕುರಿತು ಪೋಷಕರ ಸಂಘಟನೆಗಳೊಂದಿಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲು ಸಿದ್ಧತೆ ನಡೆಯುತ್ತಿದೆ. ಸಭೆಯ ಬಳಿಕ ಶಾಲೆಗಳ ಹೊಸ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.



