ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಹೆಚ್ಚಿನ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಕೋಲ್ಡ್ ಸೆಪರೇಟರ್’ ಒಡೆದುಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಘಟನೆಯ ಬೆನ್ನಲ್ಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಘಟನೆಯನ್ನು ಸಂಪೂರ್ಣವಾಗಿ ಸುರಕ್ಷಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಅಗ್ನಿಶಾಮಕ ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಅಧಿಕಾರಿಗಳಿಂದ ಘಟನೆಯ ಕುರಿತು ಮಾಹಿತಿ ಪಡೆದು ಪರಿಸ್ಥಿತಿಯನ್ನು ಪರಿಶೀಲಿಸಿದರು.
ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೈಗೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಮುಂದುವರಿದಿರುವ ಅಗ್ನಿಶಾಮಕ ಕಾರ್ಯಾಚರಣೆಯ ಬಗ್ಗೆಯೂ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು.



