ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ ‘ಕಾರಂತ ಪ್ರಶಸ್ತಿ’ಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆಯಾಗಿದ್ದಾರೆ.

ಕಾರಂತ ಪ್ರಶಸ್ತಿ ಸಮಿತಿ ಅಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ ಅವರು ಈ ವಿಷಯವನ್ನು ತಿಳಿಸಿದ್ದಾರೆ. ಅ.10ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಪತ್ತುಮುಡಿ ಸೌಧದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
‘ವೈದೇಹಿ’ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಜಾನಕಿ ಶ್ರೀನಿವಾಸಮೂರ್ತಿ ಅವರು ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರು. ಕಥೆ, ಕವನ, ಕಾದಂಬರಿ, ಪ್ರಬಂಧ, ಮಕ್ಕಳ ಸಾಹಿತ್ಯ ಹಾಗೂ ಅನುವಾದ ಕ್ಷೇತ್ರಗಳಲ್ಲಿ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ.

ಸಾಹಿತ್ಯ ಕ್ಷೇತ್ರದ ಸೇವೆಗಾಗಿ ವೈದೇಹಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎಂ.ಕೆ. ಇಂದಿರಾ ಪ್ರಶಸ್ತಿ, ಅನುಪಮಾ ಪ್ರಶಸ್ತಿ ಹಾಗೂ ಅತ್ತಿಮಬ್ಬೆ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ.
ಕೋಟ ಶಿವರಾಮ ಕಾರಂತರ ಸಾಹಿತ್ಯಿಕ ಪರಂಪರೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಪ್ರತಿವರ್ಷ ನೀಡಲಾಗುವ ಕಾರಂತ ಪ್ರಶಸ್ತಿಗೆ ಈ ಬಾರಿ ವೈದೇಹಿ ಅವರನ್ನು ಆಯ್ಕೆ ಮಾಡಲಾಗಿದೆ.



