ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಸುಲಭವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರೆಯುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಕುರಿತು ಅ.16ರಂದು ಸಮಾಲೋಚನಾ ಸಭೆ ಆಯೋಜಿಸಲಾಗಿದೆ ಎಂದು ಹಿರಿಯ ವಕೀಲ ಬಿ. ಇಬ್ರಾಹಿಂ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಯುನೈಟೆಡ್ ಲೀಗಲ್ ರಿಸರ್ಚ್ ಅಂಡ್ ಜಸ್ಟಿಸ್ ಟ್ರಸ್ಟ್ ವತಿಯಿಂದ ಅ.16ರಂದು ಸಂಜೆ 4 ಗಂಟೆಗೆ ನಗರದ ಸ್ಟೇಟ್ ಬ್ಯಾಂಕ್ನಲ್ಲಿರುವ ಭಾರತೀಯ ರೆಡ್ ಕ್ರಾಸ್ ಕಟ್ಟಡದಲ್ಲಿ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕರಾವಳಿ ಮತ್ತು ಮಲೆನಾಡು ಭಾಗದ ಜನರು ನ್ಯಾಯಾಲಯದ ಕೆಲಸಗಳಿಗಾಗಿ ಬೆಂಗಳೂರಿಗೆ ತೆರಳಬೇಕಾದ ಪರಿಸ್ಥಿತಿಯಿದೆ. ಇದರಿಂದ ಪ್ರಯಾಣ, ಸಾರಿಗೆ ಮತ್ತು ವಸತಿ ಸೇರಿದಂತೆ ಹಲವು ಖರ್ಚುಗಳನ್ನು ಭರಿಸಬೇಕಾಗುತ್ತದೆ. ವಿಶೇಷವಾಗಿ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಇದು ಹೊರೆಯಾಗುತ್ತಿದೆ ಎಂದು ಅವರು ವಿವರಿಸಿದರು.
ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಅಗತ್ಯತೆ, ಅದರ ಪ್ರಯೋಜನಗಳು ಹಾಗೂ ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿ.ಎ. ಮೊಹಮ್ಮದ್ ಹನೀಫ್, ಸರ್ಫರಾಝ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



